ಬೆಂಗಳೂರು(ಜು.15): ಬ್ರಾಹ್ಮಣ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲು ಈ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡಲು ಸರ್ಕಾರ ಆದೇಶಿಸಿದೆ.
ಈ ಹಿಂದೆಯೇ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡಿ ಆದೇಶ ಹೊರಡಿಸಿತ್ತು.
ಈ ಸಂಬಂಧ ಮಾತಾಡಿದ ಸುದ್ದಿಗಾರರೊಂದಿಗೆ ಮಾತಾಡಿದ ಡಿಸಿಎಂ ಗೋವಿಂದ ಕಾರಜೋಳ, ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ರಾಜ್ಯ ಸರ್ಕಾರ ಕೇಂದ್ರದ ಆದೇಶದ ಅನುಷ್ಠಾನಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಆದೇಶ ಹೊರಡಿಸಿದೆ. ಈ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು.
ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕಲ್ಯಾಣ ನಮ್ಮ ಸರ್ಕಾರದ ಉದ್ದೇಶ. ಹಾಗೆಯೇ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೂ ಎಲ್ಲಾ ಸೌಕರ್ಯ ಸಿಗಬೇಕು. ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೆ ಸೌಕರ್ಯಗಳನ್ನು ಒಳಗೊಂಡ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದೆ ಎಂದು ತಿಳಿಸಿದರು.
ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶಿಸಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ