ಬೆಂಗಳೂರು: ಉನ್ನತ ಶಿಕ್ಷಣದ ತರಗತಿಗಳು ಆರಂಭವಾದ ಬಳಿಕ ತರಗತಿಗಳಿಗೆ ಭೌತಿಕವಾಗಿ ಹಾಜರಾಗುವ ಅಥವಾ ಆನ್ ಲೈನ್ ಮೂಲಕ ಹಾಜರಾಗುವ ಆಯ್ಕೆಯನ್ನು ವಿದ್ಯಾರ್ಥಿಗಳಿಗೆ ಬಿಡಲಾಗಿದೆ. ಪ್ರಾಯೋಗಿಕ ತರಗತಿಗಳಿಗೆ ಭೌತಿಕವಾಗಿ ಹಾಜರಾಗುವುದನ್ನು ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಯಾರು ತರಗತಿಗಳಿಗೆ ಭೌತಿಕವಾಗಿ ಹಾಜರಾಗಲು ಇಚ್ಛಿಸುತ್ತಾರೋ ಅಂತಹ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಸಂಬಂಧಿಸಿದ ಸಂಸ್ಥೆಗೆ ಸಮ್ಮತಿ ಪತ್ರವನ್ನು ಕೊಡಬೇಕಾಗುತ್ತದೆ. ನಂತರ ತಮ್ಮ ಹೆಸರನ್ನು ನೋಂದಣಿ ಮಾಡಿಸಬೇಕಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಹೇಳಿದರು.
ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮುಂದೆ ಕೋವಿಡ್-19 ಗಮನದಲ್ಲಿರಿಸಿಕೊಂಡು ತರಗತಿಗಳನ್ನು ಆರಂಭಿಸುವ ಸಂಬಂಧ ಮಾಡಿಕೊಳ್ಳಲಾಗಿರುವ ಸಿದ್ಧತೆಗಳ ಕುರಿತು ಮಾತುಕತೆ ನಡೆಸಿದ ನಂತರ ಈ ವಿಷಯ ಪ್ರಕಟಿಸಿದರು. ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಕೋವಿಡ್ ಸೋಂಕು ಹರಡಲು ಆಸ್ಪದವಾಗದಂತೆ ತರಗತಿಗಳನ್ನು ನಡೆಸುವ ಬಗ್ಗೆ ಮೇಲ್ವಿಚಾರಣೆ ವಹಿಸಲು ಪ್ರತಿಯೊಂದು ಸಂಸ್ಥೆಯಲ್ಲೂ ಕೋವಿಡ್ ಕಾರ್ಯಪಡೆ ರಚಿಸಲಾಗುತ್ತದೆ ಎಂದರು.
ಕಾಲೇಜು ತೆರೆಯುವಿಕೆಯ ಬಗ್ಗೆ ವಿದ್ಯಾರ್ಥಿಗಳಿಂದಲೇ ಬೇಡಿಕೆ ಬಂದಿದ್ದು, ಕ್ಯಾಂಪಸ್ ಸಂದರ್ಶನ ಹಾಗೂ ಉದ್ಯೋಗ ನೇಮಕಾತಿಗಾಗಿ ಕಾಯುತ್ತಿದ್ದಾರೆ. ಇವರೆಲ್ಲರಿಗೂ ಸೂಕ್ತ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸಲು ಇಲಾಖೆ ಸಜ್ಜಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಅಭಿಪ್ರಾಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ, ಆರೋಗ್ಯ ಸೇರಿದಂತೆ ಹಲವಾರು ಇಲಾಖೆಗಳು ಜೊತೆ ಸೇರಿ ಕೆಲಸ ಮಾಡಬೇಕಾಗುತ್ತದೆ. ಜಿಲ್ಲಾಧಿಕಾರಿಗಳಿಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ಅವರು ಹೇಳಿದರು.